ನಾಳೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ: ಪೂರ್ವಾಭಾವಿ ಸಭೆ ನಡೆಸಿದ ಜಿಲ್ಲಾಧಿಕಾರಿ
ಮೈಸೂರು: ನಗರದಲ್ಲಿ ಮಾರ್ಚ್ 15 ರಂದು ಮಹಾರಾಜ ಕಾಲೇಜು ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ನಡೆಯಲ್ಲಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ವಿಡೀಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸಮಾವೇಶಕ್ಕಾಗಿ ನಡೆಸಲಾಗಿರುವ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿಗಳಿಂದ, ನಗರ ಸಭೆ, ಪುರಸಭೆಗಳಿಂದ ಫಲಾನುಭವಿಗಳನ್ನು ಕರೆತರಲು ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು ಫಲಾನುಭವಿಗಳ ಕರೆತರಲು ಅಗತ್ಯ ಕ್ರಮ ವಹಿಸಬೇಕು. ಜಿಲ್ಲಾ ಮಟ್ಟ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮೀಣ ಮಟ್ಟಕ್ಕೆ ತೆರಳಿ, ಸಮಾವೇಶ ಬಗ್ಗೆ ಅವರಿಗೆ ಮಾಹಿತಿ ನೀಡಿ, ಕಾರ್ಯಕ್ರಮಕ್ಕೆ ಆಹ್ವಾನ ನೀಡುವಂತೆ ತಿಳಿಸಿದರು.
‘ಸಮಾವೇಶದಲ್ಲಿ 50 ಸಾವಿರಕ್ಕೂ ಜನರು ಭಾಗವಹಿಸುತ್ತಿದ್ದು ಅವರಿಗೆ ಕುಡಿಯುವ ನೀರು, ಮಜ್ಜಿಗೆ ವ್ಯವಸ್ಥೆ ಮಾಡಬೇಕು. ವೇದಿಕೆ, ಶಿಷ್ಟಾಚಾರ, ಆಹಾರ, ಸ್ವಚ್ಛತೆ, ಭದ್ರತೆ, ಆರೋಗ್ಯ, ಪ್ರಚಾರ, ಬಸ್‍ಗಳ ಸಮಿತಿಗಳನ್ನು ರಚಿಸಿ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ವಹಿಸಲಾಗಿದ್ದು ಸಮರ್ಪಕವಾಗಿ ಕೆಲಸ ನಿರ್ವಹಿಸಬೇಕು ಎಂದು ಅವರು ತಿಳಿಸಿದರು. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರ ವಾಹನಗಳ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆಗಳನ್ನು ಗುರುತಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು